04/09/2026
ಸಿಇಒ ನಡೆ ಹೂಲಸೂರ ತಾಲೂಕಿನ ಗ್ರಾಮಗಳ ಕಡೆ ; ವಸತಿ ನಿಲಯ ಮತ್ತು ಅಂಗನವಾಡಿ ಹಾಗೂ ವಿವಿಧ ಕಾಮಗಾರಿಗಳ ಪರಿಶೀಲನೆ.
ಜಿಲ್ಲಾ ಪಂಚಾಯತ ಬೀದರ ಗಿತ್ತೆ ಮಾಧವ ವಿಠ್ಠಲರಾವ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಶುಕ್ರವಾರ ಬೆಳ್ಳಂ ಬೆಳಗ್ಗೆ ಹೂಲಸೂರ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಗ್ರಾಮದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಸೇವಾ ಸಂಸ್ಥೆಗಳ ಕಾರ್ಯವೈಖರಿಯನ್ನು ಪರಿಶೀಲಿಸಿದರು.
ಮೊದಲಿಗೆ ಜಲ ಜೀವನ್ ಮಿಷನ್ (JJM) ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿದ ಅವರು, ಕಾಮಗಾರಿಗಳ ಪ್ರಗತಿ, ಗುಣಮಟ್ಟ ಹಾಗೂ ಯೋಜನೆಯಿಂದ ಗ್ರಾಮಸ್ಥರಿಗೆ ದೊರೆಯುತ್ತಿರುವ ಸೌಲಭ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು ಮತ್ತು ಸರಿಯಾಗದ ಕಾಮಗಾರಿಗಳಿಗೆ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಂತರ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಆರೋಗ್ಯ ಸೇವೆಗಳು, ಮೂಲಸೌಕರ್ಯ, ಔಷಧೋಪಚಾರ ವ್ಯವಸ್ಥೆ ಹಾಗೂ ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ಆರೋಗ್ಯ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು. ಅಲ್ಲದೆ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಮಕ್ಕಳಿಗೆ ಒದಗಿಸಲಾಗುತ್ತಿರುವ ಪೌಷ್ಟಿಕ ಆಹಾರ, ಶಿಕ್ಷಣ ಚಟುವಟಿಕೆಗಳು ಹಾಗೂ ಕೇಂದ್ರದ ಮೂಲಸೌಕರ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಮಕ್ಕಳ ಆರೋಗ್ಯ ಮತ್ತು ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
*ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ವಸತಿ ನಿಲಯಕ್ಕೆ ಭೇಟಿ*:
ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿರುವ ಮೂಲಸೌಕರ್ಯ, ವಸತಿ ವ್ಯವಸ್ಥೆ, ಆಹಾರ ಹಾಗೂ ಇತರೆ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿ, ತದನಂತರ ಮೆಟ್ರಿಕ್ ಪೂರ್ವ ಬಾಲಕೀಯರ ವಸತಿ ನಿಲಯಕ್ಕೆ ಭೇಟಿ ನೀಡಿ, ವಿದ್ಯಾರ್ಥಿನಿಯರ ವಾಸ್ತವ್ಯ, ಶಿಕ್ಷಣಕ್ಕೆ ಪೂರಕವಾದ ಸೌಲಭ್ಯಗಳು ಹಾಗೂ ಸ್ವಚ್ಛತೆ ಕುರಿತು ಮಾಹಿತಿ ಪಡೆದುಕೊಂಡರು. ವಿದ್ಯಾರ್ಥಿನಿಯರಿಗೆ ಉತ್ತಮ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ ಮಕ್ಕಳೊಂದಿಗೆ ಉಪಹಾರ ಸೇವಿಸಿದರು.
ನಂತರ *ಮೊರಾರ್ಜಿ ದೇಸಾಯಿ ವಸತಿ ಶಾಲೆ (ಪ.ಜಾ.–353) ಗೆ ಭೇಟಿ ನೀಡಿ, ಶಾಲೆಯ ಶೈಕ್ಷಣಿಕ ಚಟುವಟಿಕೆಗಳು, ವಿದ್ಯಾರ್ಥಿಗಳ ವಸತಿ ವ್ಯವಸ್ಥೆ, ಆಹಾರ, ಮೂಲಸೌಕರ್ಯ ಹಾಗೂ ಶಿಕ್ಷಣದ ಗುಣಮಟ್ಟವನ್ನು ಪರಿಶೀಲಿಸಿದರು.
ಮುಂದುವರಿದು ಅಂತರ ಭಾರತಿ ತಾಂಡಾಕ್ಕೆ ಭೇಟಿ ನೀಡಿ, ಅಲ್ಲಿನ ಸಾರ್ವಜನಿಕರ ಸಮಸ್ಯೆಗಳು ಹಾಗೂ ಮೂಲಭೂತ ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಂಡರು. ಗ್ರಾಮೀಣ ಮತ್ತು ತಾಂಡಾ ಪ್ರದೇಶಗಳ ಜನರಿಗೆ ಸರ್ಕಾರದ ಯೋಜನೆಗಳ ಸೌಲಭ್ಯ ಸಮರ್ಪಕವಾಗಿ ತಲುಪುವಂತೆ ಕ್ರಮ ಕೈಗೊಳ್ಳುವ ಅಗತ್ಯವನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಜಲ ಜೀವನ್ ಮಿಷನ್ (JJM) ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿ, ಕಾಮಗಾರಿಗಳ ಪ್ರಗತಿ ಮತ್ತು ಗುಣಮಟ್ಟದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಪ್ರತಿಯೊಂದು ಮನೆಗೂ ಶುದ್ಧ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಯೋಜನೆಯನ್ನು ಪರಿಣಾಮಕಾರಿಯಾಗಿ ಹಾಗೂ ಗುಣಮಟ್ಟದೊಂದಿಗೆ ಅನುಷ್ಠಾನಗೊಳಿಸುವಂತೆ ಸೂಚಿಸಿದರು. ಹಾಗೂ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಮಕ್ಕಳ ಶೈಕ್ಷಣಿಕ ಚಟುವಟಿಕೆಗಳು, ಶಾಲೆಯ ಮೂಲಸೌಕರ್ಯ, ಕುಡಿಯುವ ನೀರು, ಶೌಚಾಲಯ ಹಾಗೂ ಇತರೆ ಸೌಲಭ್ಯಗಳನ್ನು ಪರಿಶೀಲಿಸಿದರು.
*ತೊಗಲೂರು ಗ್ರಾಮ ಪಂಚಾಯತಿಗೆ ಭೇಟಿ
ಈ ಸಂದರ್ಭದಲ್ಲಿ ವಿಬಿ-ಜಿ ರಾಮ್ ಜಿ (VB-G RAM G) ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿದ ಅವರು, ಕಾಮಗಾರಿಗಳ ಪ್ರಗತಿ, ಗುಣಮಟ್ಟ ಹಾಗೂ ಯೋಜನೆಯ ಉದ್ದೇಶದ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಗ್ರಾಮೀಣ ಭಾಗದ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಜೊತೆಗೆ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಯೋಜನೆಯ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸೂಚಿಸಿ ನಂತರ ಇದೇ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಮಕ್ಕಳಿಗೆ ಒದಗಿಸಲಾಗುತ್ತಿರುವ ಪೌಷ್ಟಿಕ ಆಹಾರ, ಆರೋಗ್ಯ ಮತ್ತು ಪೂರ್ವ ಪ್ರಾಥಮಿಕ ಶಿಕ್ಷಣ ಚಟುವಟಿಕೆಗಳು ಸೇರಿದಂತೆ ಕೇಂದ್ರದ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಹಾದೇವ ಕಾರ್ಯನಿರ್ವಾಹಕ ಅಧಿಕಾರಿಗಳು,ಸಿಡಿಪಿಒ ಅಧಿಕಾರಿ, ನೀರು ಸರಬರಾಜು ಇಲಾಖೆಯ ಅಧಿಕಾರಿ, ಸಹಾಯಕ ನಿರ್ದೇಶಕ , ಜೆಜೆಎಂ, ವಿಬಿಜಿ ರಾಮ ಜಿ ಯೋಜನೆಯ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು ಹಾಗೂ ಇತರರು ಇದ್ದರು.